ಪಶ್ಚಿಮ ಬಂಗಾಳ, ಜ 14 (DaijiworldNews/AN): ಬಿಕಾನೇರ್ನಿಂದ ಗುವಾಹಟಿಗೆ ಪ್ರಯಾಣಿಸುತ್ತಿದ್ದ ಎಕ್ಸ್ಪ್ರೆಸ್ ರೈಲಿನ 12 ಭೋಗಿಗಳು ಹಳಿ ತಪ್ಪಿದ ಪರಿಣಾಮ 9 ಮಂದಿ ಸಾವನ್ನಪ್ಪಿ, 36 ಮಂದಿ ಗಾಯಗೊಂಡಿರುವ ಘಟನೆ ಜ.13ರ ಗುರುವಾರದಂದು ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಈಶಾನ್ಯ ಗಡಿ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಗುನೀತ್ ಕೌರ್, ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಪೈಕಿ 6 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಸಿಲಿಗುರಿಯ ಉತ್ತರ ಬಂಗಾಳ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಮೇನಗುರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರನ್ನು ಮಧ್ಯರಾತ್ರಿಯ ವೇಳೆ ಕೋಚ್ಗಳಿಂದ ಹೊರತರಲಾಯಿತು ಎಂದಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸಂಸ್ರಸ್ತರಿಗೆ ಪರಿಹಾರ ಘೋಷಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ 25,000 ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ರೈಲು ಹಳಿ ತಪ್ಪಲು ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.