ಬೆಂಗಳೂರು, ಜ 14 (DaijiworldNews/HR): ರಾಜ್ಯ ಸರ್ಕಾರವು ಸಂಕ್ರಾಂತಿ ಹಬ್ಬಕ್ಕೆ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ವಿ.ಟಿ ರಾಜ್ಯಶ್ರೀ ಆದೇಶ ಹೊರಡಿಸಿದ್ದು, "ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ, ಇದಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ ಗೌರವಧನ ಪಡೆಯಲಿದ್ದಾರೆ" ಎಂದಿದ್ದಾರೆ.
ಇನ್ನು 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ 28,000 ರೂ ನಿಗದಿಪಡಿಸಲಾಗಿದ್ದು, ಹಾಗೂ 5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ 26,000 ರೂ ನಿಗದಿಪಡಿಸಲಾಗಿದೆ" ಎಂದು ತಿಳಿಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕಳೆದ ಒಂದು ತಿಂಗಳಿನಿಂದ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದು, ಹೋರಾಟದ ನಂತರ ಇದೀಗ ಸರ್ಕಾರ ವೇತನ ಹೆಚ್ಚಿಸಿ ಆದೇಶ ಹೊರಡಿಸಿದೆ.