ಬೆಂಗಳೂರು, ಜ 22 (DaijiworldNews/HR): ಹಾಲು, ನೀರು ಮತ್ತು ವಿದ್ಯುತ್ ದರ ಏರಿಕೆ ಪ್ರಸ್ತಾವನೆಗಳ ಕುರಿತು ರಾಜ್ಯ ಸರ್ಕಾರ ಯಾವುದೇ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಬಂದಿದ್ದು, ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ನಾವು ಮೊದಲು ಎಲ್ಲಾ ಅಂಶಗಳನ್ನು ಪರಿಶೀಲಿಸಬೇಕಾಗಿದೆ ಎಂದರು.
"ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಆದರೆ ತೀವ್ರತೆ ಮತ್ತು ಗಂಭೀರತೆ ಮೊದಲಿನಂತೆಯೇ ಇಲ್ಲ. ರಾಜ್ಯ ಸರ್ಕಾರವು ಕೋವಿಡ್ ನಿರ್ಬಂಧಗಳನ್ನು ಭಾಗಶಃ ಸಡಿಲಿಸಲು ನಿರ್ಧರಿಸಿದ್ದು, ಜನರು ಸೂಕ್ತ ಔಷಧಿಗಳು ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದರಿಂದ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಬಹುದು ಎಂದು ಅಧಿಕಾರಿಗಳು ಸೂಚಿಸಿದ ಹಿನ್ನಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಕೈಗೊಳ್ಳಲಾಗಿದೆ" ಎಂದಿದ್ದಾರೆ.
ಇನ್ನು ಕೊರೊನಾ ದೃಢಪಟ್ಟ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, "ಕೋವಿಡ್ ಯಾರನ್ನೂ ಉಳಿಸಿಲ್ಲ. ನಾನು ಅವರ ಕುಟುಂಬ ಮತ್ತು ಮಣಿಪಾಲ್ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡುತ್ತೇನೆ" ಎಂದು ಹೇಳಿದ್ದಾರೆ.