ನವದೆಹಲಿ, ಜ 24 (DaijiworldNews/MS): ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 439 ಮಂದಿ ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆಗೊಳಿಸಿರುವ ಅಂಕಿಅಂಶದ ಪ್ರಕಾರ ಕಳೆದ 24 ಗಂಟೆಗಳಲ್ಲಿ 3,06,064 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 22,49,335ಕ್ಕೆ ಏರಿಕೆಯಾಗಿದೆ. ದಿನನಿತ್ಯದ ಪಾಸಿಟಿವಿಟಿ ದರ ಶೇ.20.75ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.17.03ಕ್ಕೆ ಹೆಚ್ಚಳವಾಗಿದೆ.
ಕಳೆದ 24 ಗಂಟೆಗಳಲ್ಲಿ 2,43,495 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,68,04,145ಕ್ಕೆ ತಲುಪಿದೆ.
ಭಾರತದಲ್ಲಿ ಈವರೆಗೆ 71.69 ಕೋಟಿ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 24 ಗಂಟೆಯಲ್ಲಿ ದಾಖಲೆ ಪ್ರಮಾಣದಲ್ಲಿ 14,74,753 ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ದೇಶಾದ್ಯಂತ ಈವರೆಗೆ 162.26 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 10,000ಕ್ಕೆ ದಾಟಿದೆ ಎಂದು ವರದಿ ಹೇಳಿದೆ.