ಮೈಸೂರು, ಜ.29 (DaijiworldNews/KP): ಮೈಸೂರು ಜಿಲ್ಲೆಯ ಹೆಚ್ಡಿಕೋಟೆ ಪಟ್ಟಣದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಮುತ್ತು ಕೊಟ್ಟ ಶಾಲೆಯೊಂದರ ಮುಖ್ಯೋಪಾಧ್ಯಾಯನ ವಿರುದ್ಧ ಶಿಕ್ಷಣ ಇಲಾಖೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಲೆಯ ಮುಖ್ಯೋಪಾಧ್ಯಾಯರು ತಮ್ಮ ಚೇಂಬರ್ನಲ್ಲಿ ಬಾಲಕಿಗೆ ಮುತ್ತಿಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಆರೋಪಿ ಮುಖ್ಯಶಿಕ್ಷಕರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ವಿಡಿಯೋವನ್ನು ವಿದ್ಯಾರ್ಥಿಗಳು ಕಿಟಕಿಯ ಮೂಲಕ ಚಿತ್ರೀಕರಿಸಿದ್ದು, ವಿದ್ಯಾರ್ಥಿನಿಯ ದೂರಿನ ಆಧಾರದ ಮೇಲೆ ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ಅವರು ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯದ ಕುರಿತು ಮುಖ್ಯೋಪಾಧ್ಯಾಯನ ವಿರುದ್ದ ದೂರು ದಾಖಲಿಸಿ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
ದೂರಿನನ್ವಯ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆಯನ್ನು ಕೈಗೆತ್ತಿಕೊಂಡು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಆರೋಪಿ ಶಿಕ್ಷಕನನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದರು.