ಬೆಂಗಳೂರು, ಫೆ 04 (DaijiworldNews/HR): ಕೇಸರಿ ಶಾಲು, ಹಿಜಾಬ್ ಧರಿಸಿ ತರಗತಿಯಲ್ಲಿ ಕೂರಲು ಅವಕಾಶ ಇಲ್ಲ ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಅವಕಾಶವಿಲ್ಲ. ಎಲ್ಲರೂ ಸಮವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಉಡುಪಿಯ ಕುಂದಾಪುರ ಸರ್ಕಾರಿ ಕಾಲೇಜಿನ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಶಿಕ್ಷಣ ಇಲಾಖೆ ಮತ್ತು ಪಿಯು ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ನಾಗೇಶ್, "ಈ ವಿಚಾರ ಈಗ ನ್ಯಾಯಾಲಯದಲ್ಲಿದೆ. ಅಡ್ವೊಕೇಟ್ ಜನರಲ್ ಅವರೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯಬೇಕಿದೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮವಸ್ತ್ರ ಸಂಹಿತೆ ಪಾಲಿಸಬೇಕು ಎನ್ನುವುದನ್ನು ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸುತ್ತೇವೆ ಎಂದರು.
ಇನ್ನು ಉಡುಪಿ ಶಾಸಕ ರಘುಪತಿ ಭಟ್ ಅವರ ವಿರುದ್ಧ ವಿನಾಕಾರಣ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಅವರು ಶಿಕ್ಷಣ ವಂಚಿತ ಮಕ್ಕಳಿಗೆ ಸಮಸ್ಯೆಯಾಗದಂತೆ ಹಲವು ಕ್ರಮ ತೆಗೆದುಕೊಂಡಿದ್ದಾರೆ. ಎಸ್ಡಿಎಂಸಿ ಅಧ್ಯಕ್ಷರಾಗಿ ಶಾಲೆ ಅಭಿವೃದ್ಧಿಪಡಿಸಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಸಮವಸ್ತ್ರ ಧರಿಸಿ ಬಂದಿದ್ದಾರೆ. ಇದೀಗ ಕೆಲವರಿಂದ ಸಮಸ್ಯೆಯಾಗಿದೆ. ಸಮಸ್ಯೆ ಬಗೆಹರಿಸಲು ಶಾಸಕರು ಮತ್ತು ಮುಖಂಡರ ಜೊತೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದಾರೆ.