ಬೆಂಗಳೂರು,ಫೆ 07 (DaijiworldNews/HR): ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೆಹಲಿಗೆ ಭೇಟಿ ನೀಡುತ್ತಿದ್ದು, ಈ ವೇಳೆ ಬಿಜೆಪಿ ವರಿಷ್ಠರ ಭೇಟಿ ಮಾಡಿ ಬಜೆಟ್ ಹಾಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ರಾಜ್ಯ ಬಜೆಟ್ ಬಗ್ಗೆ ಚರ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭೇಟಿಗೆ ಸಮಯ ಕೋರಲಾಗಿದ್ದು, ರಾಜ್ಯ ಬಜೆಟ್, ಹಣಕಾಸಿನ ಪರಿಸ್ಥಿತಿ, ಜಿಎಸ್ಟಿ, ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಇನ್ನು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ನದಿ ಜೋಡಣೆ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ವಿತ್ತ ಸಚಿವರೊಂದಿಗಿನ ಸಿಎಂ ಬೊಮ್ಮಾಯಿಯವರ ಭೇಟಿ ಮಹತ್ವ ಪಡೆದುಕೊಂಡಿದೆ.
ಈ ಕುರಿತು ಪ್ರಾಥಮಿಕ ಶಿಕ್ಷಣ ಸಚಿವ ನಾಗೇಶ್ ಪ್ರತಿಕ್ರಿಯಿಸಿ, ಸಚಿವ ಸಂಪುಟ ವಿಸ್ತರಣೆ ವಿಚಾರ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆಯೇ ಹೊರತು ಬಿಜೆಪಿ ಅಥವಾ ಸರ್ಕಾರದಲ್ಲಿ ಅಲ್ಲ. ರಾಜ್ಯ ಬಜೆಟ್ಗೂ ಮುನ್ನ ಕೇಂದ್ರ ಸಚಿವರು, ರಾಜ್ಯದ ಸಂಸದರು ಹಾಗೂ ಪಕ್ಷದ ಮುಖಂಡರನ್ನು ಭೇಟಿ ಮಾಡಲು ಬೊಮ್ಮಾಯಿ ದೆಹಲಿಗೆ ಹೋಗುತ್ತಿದ್ದಾರೆ. ರಾಜ್ಯ ಬಜೆಟ್ಗೂ ಮುನ್ನ ರಾಜ್ಯದ ಸಂಸದರು ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಂಪ್ರದಾಯಗಳಿವೆ ಎಂದಿದ್ದಾರೆ.