ಬೆಂಗಳೂರು, ಫೆ 08 (DaijiworldNews/MS): ಹಿಜಾಬ್ ಕುರಿತು ಎದ್ದಿರುವ ವಿವಾದದ ಬಗ್ಗೆ ಫೆ.08 ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿ ಪ್ರವೇಶಿಸುವುದಕ್ಕೆ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೂರು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠವು ಇಂದು ವಿಚಾರಣೆ ನಡೆಸಲಿದೆ.
ಉಡುಪಿಯ ಸರ್ಕಾರಿ ಪಿಯು ಕಾಲೇಜು ಮತ್ತು ಕುಂದಾಪುರದ ಭಂಡಾರ್ಕರ್ ಕಲಾ & ವಿಜ್ಞಾನ ಕಾಲೇಜಿನ ಮುಸ್ಲಿಮ್ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗುವುದಕ್ಕೆ ಅಡ್ಡಿ ಪಡಿಸುತ್ತಿರುವ ಪ್ರಕರಣದ ಸಂಬಂಧ ಸಲ್ಲಿಸಿರುವ ಪ್ರತ್ಯೇಕ ಮನವಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ನಡೆಸಲಿದೆ.
ಈ ಮಧ್ಯೆ ರಾಜ್ಯದ ಎಲ್ಲಾ ಕಾಲೇಜು ಗಳಲ್ಲಿ ವಿದ್ಯಾರ್ಥಿಗಳ ವಸ್ತ್ರಸಂಹಿತೆಯ ಕುರಿತು ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಇನ್ನೆರಡು ಅರ್ಜಿ ಸಲ್ಲಿಸಲಾಗಿದ್ದು ಇವುಗಳನ್ನು ಕೂಡಾ ವಿಚಾರಣೆಗೆ ಪರಿಗಣಿಸುವ ಸಾಧ್ಯತೆಯಿದೆ.
ಕುಂದಾಪುರ ತಾಲ್ಲೂಕಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ತಮ್ಮ ತಾಯಂದಿರ ಮೂಲಕ ಸೋಮವಾರ ಕರ್ನಾಟಕ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ. ತೃತೀಯ ಬಿಬಿಎ ವಿದ್ಯಾರ್ಥಿ ಸುಹಾ ಮೌಲಾನಾ ಅವರು ತಮ್ಮ ತಾಯಿ ಬೀಬಿ ಸಾರಾ ಮತ್ತು ಪ್ರಥಮ ಬಿಬಿಎ ವಿದ್ಯಾರ್ಥಿನಿ ಐಶಾ ಅಲೀಫಾ ಕೌಸರ್ ಅವರು ತಮ್ಮ ತಾಯಿ ರಹಮತ್ ಅವರ ಮೂಲಕ ಮನವಿ ಸಲ್ಲಿಸಿದ್ದು, ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್, ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಪರವಾಗಿ ಪ್ರಾಂಶುಪಾಲರು, ಶಾಸಕ ಶ್ರೀನಿವಾಸ ಶೆಟ್ಟಿ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.