ಶಿವಮೊಗ್ಗ, ಫೆ 08 (DaijiworldNews/HR): ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಇಂದು ಮತ್ತು ನಾಳೆ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಿ ತಹಶೀಲ್ದಾರ ನಾಗರಾಜ್ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ನಡೆಸಿದ್ದು, ಕಾಲೇಜಿನ ಧ್ವಜಸ್ತಂಭವನ್ನು ಹತ್ತಿ ಕೇಸರಿ ಧ್ವಜವನ್ನು ಹಾರಿಸಿದ್ದರು.
ಇನ್ನು ಕಾಲೇಜಿನಲ್ಲಿ ಕಲ್ಲು ತೂರಾಟ, ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿರೋಧಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆಗೆ ಇಳಿದಿದ್ದು, ಸ್ವತಃ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾಗಿದ್ದು, ಈ ನಡುವೆಯೂ ಪೊಲೀಸರ ಮೇಲೆ ಕಲ್ಲು ತೂರಾಟ, ಕಾಲೇಜು ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.