ಲಖನೌ, ಫೆ 11 (DaijiworldNews/KP): ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.
ಈ ವಿಚಾರವಾಗಿ ಸಮಾಜವಾದಿ ಪಕ್ದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬಿಜೆಪಿ ನೇತೃತ್ವದ ಸರ್ಕಾರವು ನ್ಯಾಯ ಕೊಡಿಸುವಲ್ಲಿ ವಿಫಲವಾಗಿದೆ ಎಂದು ಹರಿಹಾಯ್ದಿದ್ದಾರೆ.
ಕಳೆದ ವರ್ಷ ಅಕ್ಟೋಬರ್ 3ರಂದು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದರು, ಈ ವೇಳೆ ಆಶಿಶ್ ಮಿಶ್ರಾ ಹಾಗೂ ಅವರ ಬೆಂಗಾವಲು ಪಡೆಗಳು ವಾಹನಗಳನ್ನು ರೈತರ ಮೇಲೆ ಹರಿಸಿದ್ದು, ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟಿದ್ದರು, ಆದರೆ ಅವರ ಸಾವಿಗೆ ನ್ಯಾಯ ಒದಗಿಸಲು ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಿದೆ, ಆರೋಪಿಗೆ ಕಠಿಣ ಶಿಕ್ಷೆಯನ್ನು ಕೊಡಿಸಲು ಸರ್ಕಾರವು ಮುಂದಾಗಬೇಕಿತ್ತು. ಆದರೆ, ಅದು ವಿಫಲವಾಗಿದೆ. ಅಲ್ಲದೇ ರೈತರ ಸಾವಿಗೆ ಬಿಜೆಪಿಯೇ ಕಾರಣ ಎಂಬ ಸತ್ಯ ಎಲ್ಲರಿಗೂ ತಿಳಿದಿದೆ ಎಂದು ಅಖಿಲೇಶ್ ಹೇಳಿದ್ದಾರೆ.