ಬೆಂಗಳೂರು, ಫೆ 12 (DaijiworldNews/MS): ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ವಿವಾದ ಹಿನ್ನಲೆ ರಾಜ್ಯ ಸರ್ಕಾರ ಫೆಬ್ರವರಿ 15ರವರೆಗೆ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ, ಸುತ್ತೋಲೆ ಹೊರಡಿಸಿದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಫೆಬ್ರವರಿ 12, 13 ರ ಭಾನುವಾರ ರಜಾ ದಿನ ಸಹಿತವಾಗಿ ಫೆಬ್ರವರಿ 14, 15ರವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ತಿಳಿಸಲಾಗಿದೆ
ಈಗಾಗಲೇ ರಾಜ್ಯಾಧ್ಯಂತ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳ ರಜೆಯನ್ನು ಫೆಬ್ರವರಿ 16ರವರೆಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಆದರೆ ಪಿಯುಸಿ ತರಗತಿಗಳಿಗೆ ರಜೆ ಘೋಷಣೆಯ ನಿರ್ಧಾರವನ್ನು ಮಾಡಿರಲಿಲ್ಲ. ಸಿಎಂ ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ ಪ್ರಕಟಿಸೋದಾಗಿ ತಿಳಿಸಿದ್ದರು. ಈ ಬೆನ್ನಲ್ಲೇ, ಇದೀಗ ಪದವಿ ಪೂರ್ವ ಕಾಲೇಜುಗಳಿಗೆ ಫೆಬ್ರವರಿ 15ರವರೆಗೆ ರಜೆಯನ್ನು ವಿಸ್ತರಣೆ ಮಾಡಿ, ಶಿಕ್ಷಣ ಇಲಾಖೆ ಆದೇಶಿಸಿದೆ.