ಬೆಂಗಳೂರು, ಫೆ 15 (DaijiworldNews/HR): ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ತ್ರಿ ಸದಸ್ಯ ಪೀಠ ಬುಧವಾರ (ನಾಳೆ)ಗೆ ಮುಂದೂಡಿದೆ.
ಮುಖ್ಯ ನ್ಯಾ.ರಿತುರಾಜ್ ಅವಸ್ಥಿ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾ.ಜೈಬುನ್ನಿಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಇಂದು ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ಆರಂಭಿಸಿದ್ದು, ಹಿಜಾಬ್ ಕುರಿತ ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ ಕಾಮತ್ ಅವರ ವಾದ ಆಲಿಸಿ ಬಳಿಕ ಅರ್ಜಿ ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.
ಇನ್ನು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅನೇಕ ವಕೀಲರು ವಾದ ಮಂಡನೆಗೆ ಹಕ್ಕು ಮಂಡಿಸಿದ್ದು, ಯುವತಿಯ ಎರಡನೇ ಅರ್ಜಿ ಸಂಬಂಧ ಹಿರಿಯ ವಕೀಲ ರವಿವರ್ಮಕುಮಾರ್ ಕೂಡ ವಾದ ಮಂಡಿಸಿದ್ದಾರೆ.