ಬೆಂಗಳೂರು, ಫೆ 17 (DaijiworldNews/KP): ಕೊರೊನಾ ಸೋಂಕು ಮತ್ತು ಓಮಿಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪದವಿಯ ಪಾಠ-ಪ್ರವಚನಗಳು ಇನ್ನು ಮುಗಿಯದ ಹಿನ್ನಲೆಯಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡುವಂತೆ ವಿವಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.
ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಉನ್ನತ ಶಿಕ್ಷಣ ಇಲಾಖೆ ಈಗಾಗಲೇ ಕೆಲವು ವಿಶ್ವವಿದ್ಯಾಲಯಗಳು ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ, ಆದರೆ ಕೊರೊನಾ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿದ್ದಾರೆ.
ಇನ್ನು ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಪದವಿ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿಶ್ವವಿದ್ಯಾಲಯಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.