ಬೆಂಗಳೂರು, ಫೆ 17 (DaijiworldNews/MS): ಕಲಾವಿದರ ಮಾಸಾಶನವನ್ನು ಹೆಚ್ಚಳ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ಕುಮಾರ್ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.
ಇಂದು ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ಬಂಡೆಪ್ಪಕಾಶ್ಯಂಪೂರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಲಾವಿದರಿಗೆ ನೀಡುತ್ತಿರುವ ಮಾಸಾಸನ ನಿರ್ವಹಣೆಗೆ ಸಾಕಾಗುತ್ತಿಲ್ಲ ಎಂಬ ಬೇಡಿಕೆ ಇದೆ. ಹೀಗಾಗಿ ಮಾಸಾಸನ ಹೆಚ್ಚಳದ ಪ್ರಸ್ತಾವನೆ ಸರ್ಕಾರದ ಮುಂದಿದೆ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಹಣಕಾಸು ಇಲಾಖೆಯ ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಸಭಾಧ್ಯಕ್ಷ ಕಾಗೇರಿ ಅವರು, ಕಲಾವಿದರು ನಮ್ಮ ಸಂಸ್ಕೃತಿಯ ಅಂಗ. ಕೊವೀಡ್ ಸಾಂಕ್ರಮಿಕದಿಂದ ಕಲಾವಿದ ಬದುಕು ಶೋಚನೀಯ ಸ್ಥಿತಿ ತಲುಪಿದೆ. ಹೆಚ್ಚಿನ ಅನುದಾನ ನೀಡುವುದು ಒತ್ತಮ ಎಂದು ಸಲಹೆ ನೀಡಿದರು.
ರಾಜ್ಯ ಮತ್ತು ಅಕಾಡೆಮಿಯಿಂದ ಪ್ರಶಸ್ತಿ ಪಡೆದ ಕಲಾವಿದರಿಗೆ ವೈದ್ಯಕೀಯ ವೆಚ್ಚ ಮರುಪಾವತಿ, ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟು ಪ್ರೋತ್ಸಾಹ ನೀಡುತ್ತಿದ್ದೇವೆ. ಆದರೆ, ಇವರಿಗೆ ಶಾಶ್ವತವಾಗಿ ಅನುದಾನ ನೀಡಲು ಹಣಕಾಸಿನ ಸಮಸ್ಯೆ ಎದುರಾಗಿದೆ. ಹಣಕಾಸಿನ ಲಭ್ಯತೆ ನೋಡಿಕೊಂಡು ನಾವು ತೀರ್ಮಾನಿಸುತ್ತೇವೆ ಎಂದು ಸಚಿವ ಸುನೀಲ್ಕುಮಾರ್ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.