ಬೆಂಗಳೂರು, ಫೆ 18 (DaijiworldNews/HR): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿ ಕರ್ನಾಟಕ ಕಾಂಗ್ರೆಸ್ ನಾಯಕರು ರಾಜ್ಯ ವಿಧಾನಮಂಡಲದಲ್ಲಿ ಧರಣಿ ಆರಂಭಿಸಿದ್ದಾರೆ.
ಮುಂದೊಂದು ದಿನ ಕೆಂಪು ಕೋಟೆ ಮೇಲೆ ಕೇಸರಿ ಬಾವುಟ ಹಾರಿಸಲಾಗುವುದು ಎಂದು ಈಶ್ವರಪ್ಪ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದ್ದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಶಾಸಕರು ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಈಶ್ವರಪ್ಪ ಅವರನ್ನು ವಜಾಗೊಳಿಸಲು ಗಡುವು ನೀಡಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಖುದ್ದು ವಿಧಾನಸಭೆಗೆ ತೆರಳಿ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿ ಅಹೋರಾತ್ರಿ ಧರಣಿ ನಿಲ್ಲಿಸುವಂತೆ ಮನವಿ ಮಾಡಿದರು. ಆದರೆ, ಕಾಂಗ್ರೆಸ್ ನಾಯಕರು ತಮ್ಮ ಧರಣಿ ಮುಂದುವರೆಸಿದ್ದಾರೆ.
ಪ್ರತಿಪಕ್ಷಗಳು ಸಚಿವ ಈಶ್ವರಪ್ಪ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಜನರಲ್ಲಿ ತಪ್ಪು ಗ್ರಹಿಕೆ ಮೂಡಿಸಲು ಯತ್ನಿಸುತ್ತಿದ್ದು, ಈ ವಿಚಾರದಲ್ಲಿ ಜನವಿರೋಧಿ ಧೋರಣೆ ತೋರುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.
ಈಶ್ವರಪ್ಪ ಹೇಳಿಕೆಯಲ್ಲಿ ತಪ್ಪೇನೂ ಇಲ್ಲ, ಕಾನೂನಿಗೆ ವಿರುದ್ಧವಾದ ಅಂಶಗಳೂ ಇಲ್ಲ, ಬೇರೆ ವಿಚಾರವೇ ಇಲ್ಲ ಆದರೆ ಪ್ರತಿಪಕ್ಷಗಳು ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಿಕೊಂಡಿದ್ದು, ವಿನಾಕಾರಣ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ ಎಂದಿದ್ದಾರೆ.