ಬೆಂಗಳೂರು, ಫೆ 18 (DaijiworldNews/HR): ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ರಾಜಕೀಯ ಪ್ರತಿಷ್ಠೆಗೆ ಆಹುತಿಯಾಗಿದೆ. ಬೆಳಗಾವಿ ಕಲಾಪವನ್ನು ಬಲಿ ಪಡೆದ ಮೇಲೂ ರಾಜ್ಯಪಾಲರ ಭಾಷಣದ ಮೇಲೆ ಅಮೂಲ್ಯ ಚರ್ಚೆ ನಡೆಸಬೇಕಿದ್ದ ಈ ಸದನಕ್ಕೂ ಅದೇ ಚಾಳಿ ವಕ್ಕರಿಸಿದೆ. ಪ್ರಜಾಪ್ರಭುತ್ವಕ್ಕೆ ಗ್ರಹಣ ಹಿಡಿಸುವ ಕೆಲಸ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ. ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್ ಹೇಳಿದ ಈ ಮಾತು ಪ್ರಜಾಸತ್ತೆಯನ್ನು ಗೌರವಿಸುವ ಪ್ರತಿ ವ್ಯಕ್ತಿಗೂ ದಾರಿದೀಪ. ಆದರೆ, ಇವತ್ತು ಪ್ರಜಾಪ್ರಭುತ್ವವೆಂದರೆ ರಾಜಕೀಯದಿಂದ, ರಾಜಕೀಯಕ್ಕಾಗಿ, ರಾಜಕೀಯಕ್ಕೋಸ್ಕರವೇ ಎನ್ನುವಂತಾಗಿದೆ ಎಂದು ಟೀಕಿಸಿದ್ದಾರೆ.
ಹತ್ತು ನಿಮಿಷ ಧರಣಿ, ಆಮೇಲೆ ಕಲಾಪ ಮುಂದೂಡುವುದು, ಸದನ ನಡೆಯುವ ರೀತಿ ಇದೇನಾ? ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ ಒಂದೂವರೆಯಿಂದ ಎರಡು ಕೋಟಿ ರೂ. ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಉತ್ತರದಾಯಿತ್ವ ಯಾರದು? ಅವರ ನಿರೀಕ್ಷೆಗಳನ್ನು ಕಾಲ ಕಸ ಮಾಡಿಕೊಂಡ ರಾಜಕೀಯ ಪ್ರತಿಷ್ಠೆಗೆ ಕೊನೆ ಇಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಇನ್ನು ಕೊರೊನಾದಿಂದ ಎರಡು ವರ್ಷ ಮಕ್ಕಳ ಶಿಕ್ಷಣ ಹಾಳಾಯಿತು. ಈಗ ಹಿಜಾಬ್, ಕೇಸರಿ ಶಾಲು ಗಲಾಟೆಯಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆಯೇ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಹೊಣೆ ಯಾರು? ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗೆ ಇಲ್ಲವೇ? ಎಂದಿದ್ದಾರೆ.
ಕಲಾಪಕ್ಕೆ ಜನಪರ ಅಜೆಂಡಾ ಇರಬೇಕೆ ವಿನಾ ಚುನಾವಣೆ ಅಜೆಂಡಾ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನವು ಮತ ಗಳಿಕೆಗೆ ಗುರಾಣಿ ಆಗಿರುವುದು ದುರದೃಷ್ಟಕರ. ತಮ್ಮ ಪ್ರತಿಷ್ಠೆಗೆ ಕಲಾಪವನ್ನು ಹಳಿತಪ್ಪಿಸಿ ಜನರ ನಿರೀಕ್ಷೆಗಳನ್ನು ಹೊಸಕಿ ಹಾಕುವುದು ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣಕ್ಕೆ ನಿದರ್ಶನ ಎನ್ನುವುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.