ಬೆಂಗಳೂರು, ಫೆ 19 (DaijiworldNews/MS): ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ಅವರು ಶನಿವಾರ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಸುಕಿನ ಜಾವ ಚಿಕಿತ್ಸೆ ಫಲಕಾರಿಯಾಗಲೇ ನಿಧನರಾಗಿದ್ದಾರೆ.
ರಾಜೇಶ್ ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ರಾಜೇಶ್ ಅವರಿಗೆ ಬೆಂಗಳೂರಿನ ಕಸ್ತೂರಬಾ ನಗರದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಪದ್ಮಭೂಷಣ ಡಾ.ರಾಜ್ ಕುಮಾರ್ ಸೇರಿದಂತೆ ಹಿರಿಯ ನಟರೊಂದಿಗೆ ವಿಶಿಷ್ಟ ನಟನೆಯ ಮೂಲಕ ಗುರುತಿಸಿಕೊಂಡಿದ್ದಂತ ನಟ ರಾಜೇಶ್ ಅವರ ಪಾರ್ಥೀವ ಶರೀರದ ಅಂತಿಮ ಸಂಜೆ 6 ಗಂಟೆಯವರೆಗೆ ವಿದ್ಯಾರಣ್ಯಪುರದ ನಿವಾಸದಲ್ಲಿ ನಡೆಯಲಿದೆ. ಈ ಬಳಿಕ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸಲಿದ್ದಾರೆ.
ವಿದ್ಯಾಸಾಗರ್ ಹೆಸರಿನ ಮೂಲಕ ರಂಗಭೂಮಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ವೀರ ಸಂಕಲ್ಪ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಪಡೆದರು. 1968ರಲ್ಲಿ ತೆರೆಕಂಡ ‘ನಮ್ಮ ಊರು’ ಚಿತ್ರದಲ್ಲಿ ತಮ್ಮ ಹೆಸರನ್ನು ವಿದ್ಯಾಸಾಗರ್ ಇಂದ ರಾಜೇಶ್ ಎಂದು ಬದಲಾಯಿಸಿಕೊಂಡರು. ನಟ ರಾಜೇಶ್ ಅವರ ವೃತ್ತಿ ಬದುಕಿಗೆ ದೊಡ್ಡ ತಿರುವು ಕೊಟ್ಟ ಚಿತ್ರ ‘ನಮ್ಮ ಊರು’. ಆ ಬಳಿಕ ನೂರಾರು ಚಿತ್ರಗಳಲ್ಲಿ ನಟಿಸಿ ಕನ್ನಡಿಗರ ಮನಸೂರೆಗೊಳಿಸಿದ್ದರು.