ಪಂಜಾಬ್, ಫೆ 20 (DaijiworldNews/MS): ಬಾಲಿವುಡ್ ನಟ ಸೋನು ಸೂದ್ ಅವರು ಪಂಜಾಬ್ ನ ಮೊಗಾ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಪ್ರವೇಶಕ್ಕೆ ಯತ್ನಿಸಿದ ಆರೋಪದ ಮೇಲೆ ಅವರ ಕಾರನ್ನು ಜಪ್ತಿ ಮಾಡಿ ಮನೆಗೆ ವಾಪಸ್ ಕಳುಹಿಸಿದ ಘಟನೆ ಭಾನುವಾರ ನಡೆದಿದೆ.
ಬಾಲಿವುಡ್ ನಟ ಸೋನು ಸೂದ್ ಅವರ ಸಹೋದರಿ ಮಾಳವಿಕಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಂಜಾಬ್ನ ಮೋಗಾದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಇವರ ಪರ ಪ್ರಚಾರ ಮಾಡಲು ಸೋನು ಸೂದ್ ಅವರು ಮತಗಟ್ಟೆಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಚುನಾವಣಾ ವೀಕ್ಷಕರ ನಿರ್ದೇಶನದ ಮೇರೆಗೆ ಅವರ ವಾಹನವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊಗಾ ಪಿಆರ್ ಓಪ್ರದ್ಭದೀಪ್ ಸಿಂಗ್ ಪ್ರಕಾರ, “ಸೋನು ಸೂದ್ ಮತಗಟ್ಟೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಅವರ ಕಾರನ್ನು ಜಪ್ತಿ ಮಾಡಿ ಮನೆಗೆ ವಾಪಸ್ ಕಳುಹಿಸಲಾಗಿದೆ. ಮನೆಯಿಂದ ಹೊರಗೆ ಕಾಲಿಟ್ಟರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದಿದ್ದಾರೆ.
"ವಿಶೇಷವಾಗಿ ಅಕಾಲಿದಳ ಸೇರಿದಂತೆ ನಮಗೆ ಪ್ರತಿಪಕ್ಷಗಳಿಂದ ವಿವಿಧ ಬೂತ್ಗಳಲ್ಲಿ ಬೆದರಿಕೆ ಕರೆಗಳು ಬಂದಿವೆ ಕೆಲವು ಬೂತ್ಗಳಲ್ಲಿ ಹಣವನ್ನು ಹಂಚಲಾಗುತ್ತಿದೆ ಎಂಬ ವರದಿಗಳು ಬಂದಿದೆ. ಆದ್ದರಿಂದ ಈ ಬಗ್ಗೆ ಪರಿಶೀಲಿಸಿ ಮತ್ತು ನ್ಯಾಯಯುತ ಚುನಾವಣೆಯನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿತ್ತು. ಅದಕ್ಕಾಗಿಯೇ ನಾವು ಹೊರಗೆ ಹೋಗಿದ್ದೆವು" ಎಂದು ಸೂದ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.