ಶಿರಸಿ, ಮಾ 06 (DaijiworldNews/DB): ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳನ್ನು ನಿಷೇಧ ಮಾಡುವ ಬದಲು ಅವುಗಳ ಚಟುವಟಿಕೆಗಳ ಮೇಲೆ ನಿಗಾ ಇಡುವ ಕೆಲಸ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಿರಸಿಯಲ್ಲಿ ರವಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸಂಘಟನೆಗಳು ಶಾಂತಿ ಕದಡುವ ಕೆಲಸ ಮಾಡುತ್ತಿವೆ. ಅಂತಹ ಚಟುವಟಿಕೆಗಳ ಮೇಲೆ ನಿಗಾ ಇಡಲಾಗುವುದು. ನಿಷೇಧದ ನಿರ್ಧಾರ ಕೇಂದ್ರ ಸರಕಾರಕ್ಕೆ ಬಿಟ್ಟದ್ದಾಗಿದೆ ಎಂದರು.
ಶಿವಮೊಗ್ಗ, ಆಳಂದ ಹೊರತುಪಡಿಸಿ ರಾಜ್ಯಾದ್ಯಂತ ಶಾಂತಿ ಸುವ್ಯವಸ್ಥೆ ಒಳ್ಳೆಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಚುನಾವಣೆ ಸಮೀಪಿಸಿದಾಗ ಯಾವುದೇ ಘಟನೆ ರಾಜಕೀಯ ತಿರುವು ಪಡೆದುಕೊಳ್ಳುವುದು ಸಹಜವಾಗಿದೆ. ಕೆಲವು ಘಟನೆಗಳ ಲಾಭ ಪಡೆಯಲು ರಾಜಕೀಯ ಪಕ್ಷಗಳು ಹವಣಿಸುತ್ತಿವೆ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.