ಬೆಂಗಳೂರು, ಮಾ 13 (DaijiworldNews/DB): ಬಿಜೆಪಿ ಪಕ್ಷ ಬಿಟ್ಟು ಯಾರೂ ಬೇರೆ ಪಕ್ಷಗಳಿಗೆ ಹೋಗುವುದಿಲ್ಲ. ಬೇರೆ ಪಕ್ಷದಿಂದ ಬರುವವರ ಬಗ್ಗೆ ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ತಮ್ಮ ನಿವಾಸದೆದುರು ಸುದ್ದಿಗಾರರ ಜೊತೆ ರವಿವಾರ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ ಗೆ ನಾಯಕರು ಪಕ್ಷಾಂತರ ಮಾಡುತ್ತಾರೆ ಎಂಬುದು ಸತ್ಯಕ್ಕೆ ದೂರವಾದುದು. ಪಕ್ಷದಿಂದ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಆದರೆ ಬೇರೆ ಪಕ್ಷಗಳಿಂದ ಬಿಜೆಪಿಗೆ ಬರುತ್ತಾರೆಯೇ ಎಂಬುದನ್ನು ಕಾದು ನೋಡಿ ಎಂದರು.
ಸಂಪುಟ ವಿಸ್ತರಣೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಾರ್ಚ್ 30-31ರಂದು ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ಇದೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಸಭೆಯಲ್ಲಿ ತೀರ್ಮಾನವಾಗುತ್ತದೆ ಎಂದರು.
ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಬಗ್ಗೆ ಚರ್ಚೆ ನಡೆದಿಲ್ಲ. ಈ ಬಗ್ಗೆ ವರಿಷ್ಟ ಮಟ್ಟದಲ್ಲಾಗಲೀ, ರಾಜ್ಯ ಬಿಜೆಪಿಯಲ್ಲಾಗಲೀ ಚರ್ಚೆಯೇ ನಡೆದಿಲ್ಲ. ವರಿಷ್ಠರಿಂದ ಸೂಚನೆ ಬಂದಾಗ ದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.