ಯಾದಗಿರಿ, ಮಾ 19 (DaijiworldNews/DB): ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಕೆ ಮಾಡುವುದರಿಂದ ಮಕ್ಕಳಲ್ಲಿ ನೈತಿಕತೆ ಬೆಳೆಯುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥನೆ ಮಾಡಿದ್ದಾರೆ.
ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಎಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಗುಜರಾತ್ ನಲ್ಲಿ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಿರುವ ಕ್ರಮದ ಬಗ್ಗೆ ನಮ್ಮ ಸಚಿವರು ಈಗಾಗಲೇ ಪ್ರಸ್ತಾಪ ಮಾಡಿದ್ದಾರೆ. ಇದು ಮಕ್ಕಳಲ್ಲಿ ನೈತಿಕತೆ ಮಟ್ಟ ಹೆಚ್ಚಾಗಲು ಸಹಕಾರಿಯಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿಯೂ ಜಾರಿಗೆ ತರಲು ಯೋಜಿಸಲಾಗಿದೆ ಎಂದರು.
ಪಾವಗಡ ಖಾಸಗಿ ಬಸ್ ದುರಂತದ ಬಗ್ಗೆ ಇದೀಗ ತಾನೆ ಗೊತ್ತಾಗಿದೆ. ಅಲ್ಲಿಗೆ ಭೇಟಿ ನೀಡಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಆಧರಿಸಿ ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡು ನಂತರ ಕ್ರಮಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಸರ್ಕಾರ ಯಾವುದೇ ಕಾರಣಕ್ಕೂ ಕೆಕೆಆರ್ಡಿಬಿಯನ್ನು ನಿರ್ಲಕ್ಷಿಸಿಲ್ಲ. ನಂಜುಂಡಪ್ಪ ವರದಿ ಪ್ರಕಾರ ಅನುದಾನ ನೀಡಲಾಗುತ್ತಿದೆ ಎಂದವರು ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.