ಬೆಂಗಳೂರು, ಮಾ 22 (DaijiworldNews/DB): ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 1ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಇದರಿಂದ ರಾಜ್ಯ ನಾಯಕರಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ.
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮತ್ತು ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಬಲವರ್ಧನೆಗೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಅಮಿತ್ ಶಾ ಅವರು ರಾಜ್ಯ ನಾಯಕರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ.
ಕೇಂದ್ರ ಗೃಹ ಸಚಿವರ ರಾಜ್ಯ ಭೇಟಿ ಖಚಿತಗೊಂಡ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ಭೇಟಿ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಮತ್ತು ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಜೊತೆ ಚರ್ಚೆ ನಡೆಸಿದ್ದಾರೆ. ಗೃಹ ಸಚಿವರ ಭೇಟಿ ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಸಿದ್ಧತೆ, ಭದ್ರತಾ ವಿಚಾರ ಮತ್ತು ಚರ್ಚಿಸಬೇಕಾದ ಅಗತ್ಯ ವಿಚಾರಗಳ ಕುರಿತು ನಾಲ್ವರು ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಅಮಿತ್ ಶಾ ರಾಜ್ಯಕ್ಕೆ ಆಗಮಿಸುವ ವೇಳೆ ಬಜೆಟ್ ಅಧಿವೇಶನ ಮುಗಿದಿರುತ್ತದೆ. ಪಂಚರಾಜ್ಯ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿಲ್ಲಿಗೆ ತೆರಳಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಮಾತುಕತೆ ನಡೆಸಿದ್ದರು. ಚುನಾವಣಾ ಫಲಿತಾಂಶ ಬಂದ ಬಳಿಕ ಈ ಬಗ್ಗೆ ಯೋಜಿಸೋಣ ಎಂಬುದಾಗಿ ಶಾ ಭರವಸೆ ನೀಡಿದ್ದರು ಎಂಬುದಾಗಿ ಮೂಲಗಳು ತಿಳಿಸಿವೆ. ಹೀಗಾಗಿ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ.