ಬೆಂಗಳೂರು, ಮಾ 22 (DaijiworldNews/HR): ಪಾವಗಡ ತಾಲೂಕಿನಲ್ಲಿ ಸಂಭವಿಸಿದ ಖಾಸಗಿ ಬಸ್ ದುರಂತಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಖಾಸಗಿ ಬಸ್ ಉರುಳಿ ಬಿದ್ದ ಪ್ರಕರಣವನ್ನು ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯತೆ ವಹಿಸಿದ ನಾಲ್ವರು ಸಾರಿಗೆ ಇಲಾಖೆ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.
ಇನ್ನು ಘಟನೆ ಸಂಭವಿಸುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನಗೆ ದೂರವಾಣಿ ಮೂಲಕ ಸಂಪರ್ಕಿಸಿ ಸ್ಥಳಕ್ಕೆ ಹೋಗಬೇಕು ಎಂದು ಸೂಚನೆ ಕೊಟ್ಟರು. ಅದರಂತೆ ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಪಾವಗಡ, ತುಮಕೂರು ಹಾಗೂ ಬೆಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದಿದ್ದಾರೆ.
ಅಂತೆಯೇ ಘಟನೆಯಲ್ಲಿ ಮೃತಪಟ್ಟವರಿಗೆ ಇಲಾಖೆ ವತಿಯಿಂದ ತಲಾ ಐದು ಲಕ್ಷ ರೂ. ಪರಿಹಾರ ಹಾಗೂ ವೈಯಕ್ತಿಕವಾಗಿ ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡಿದ್ದೇನೆ ಎಂದು ತಿಳಿಸಿದ್ದಾರೆ.