ಬೆಂಗಳೂರು, ಮಾ 22 (DaijiworldNews/MS): ರಾಜಕೀಯಕ್ಕಿಂತ ನಾಡಿನ ಜನರ ಹಿತ ಮುಖ್ಯ . ರಾಜ್ಯದ ಹಿತಾಸಕ್ತಿಗಾಗಿ ರಾಜಕೀಯ ಬದಿಗಿಟ್ಟು ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರವು ಕೂಡಲೇ ಪರಿಸರ ಅನುಮತಿ ಕೊಡಬೇಕು. ವಿಸ್ತೃತ ಯೋಜನಾ ವರದಿಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಂಗೀಕರಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾವೇರಿ ವಿವಾದ ಸುಮಾರು ನೂರು ವರ್ಷಗಳ ಹಿಂದಿನದು. ಅಂದಿನದಲೂ ನಮಗೆ ಅನ್ಯಾಯ ಆಗುತ್ತಲೇ ಬಂದಿದೆ. 1892 ರ ಒಪ್ಪಂದ, 1924 ರ ಒಪ್ಪಂದ ಹೀಗೆ ಹಲವಾರು ಬಾರಿ ನಮಗೆ ಅನ್ಯಾಯ ಆಗಿದೆ. ಈಗಲೂ ಅನ್ಯಾಯ ಮಾಡಲು ನೋಡಿದರೆ ಅದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ನಮ್ಮ ಪಾಲಿನ ಹೆಚ್ಚುವರಿ ನೀರನ್ನು ನಾವು ಬಳಕೆ ಮಾಡಿಕೊಳ್ಳಲು ತಮಿಳುನಾಡಿನ ಸರ್ಕಾರ ತಕರಾರು ಮಾಡುತ್ತಿದೆ. ಅಲ್ಲಿನ ಎಲ್ಲಾ ಪಕ್ಷಗಳು ರಾಜಕೀಯ ಕಾರಣಕ್ಕೆ ವಿರೋಧ ಮಾಡ್ತೀವಿ, ನಾವು ನಮ್ಮ ನೆಲ, ಜಲ, ಭಾಷೆ, ಗಡಿಗೆ ಸಂಬಂಧಿಸಿದಂತೆ ರಾಜಕಾರಣ ಮಾಡಿಲ್ಲ, ಮುಂದೆಯೂ ಮಾಡಲ್ಲ. ಮೊನ್ನೆ ಮುಖ್ಯಮಂತ್ರಿಗಳು ಸರ್ವಪಕ್ಷಗಳ ಸಭೆ ಕರೆದಿದ್ದರು, ಅಲ್ಲಿ ನಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ಹೇಳಿದ್ದೇವೆ. ನಮಗೆ ರಾಜಕೀಯಕ್ಕಿಂತ ನಾಡಿನ ಜನರ ಹಿತ ಮುಖ್ಯ. ಆದ್ದರಿಂದ ತಮಿಳುನಾಡಿನ ನಿರ್ಣಯವನ್ನು ಖಂಡಿಸಿ ನಾವು ಕೂಡ ಖಂಡನಾ ನಿರ್ಣಯವನ್ನು ಮಾಡಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡೋಣ ಎಂದು ಹೇಳಿದ್ದಾರೆ.
ಬೆಂಗಳೂರು ನಗರದ ಸುಮಾರು 30% ಜನರಿಗೆ ಇನ್ನೂ ಕೂಡ ಕಾವೇರಿ ನೀರು ಸಿಗುತ್ತಿಲ್ಲ. ಈ ಜನ ಬೋರ್ ವೆಲ್, ಟ್ಯಾಂಕರ್ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಅಂತಾರಾಷ್ಟ್ರೀಯ ಖ್ಯಾತಿಯ ನಗರಕ್ಕೆ ಕುಡಿಯುವ ನೀರು ಕೊಡಲು ಆಗ್ತಿಲ್ಲ ಎಂದರೆ ಏನನ್ನಬೇಕು? ಎಂದು ಪ್ರಶ್ನಿಸಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ಒಕ್ಕೂಟ ಧರ್ಮ ಪಾಲನೆ ಮಾಡಬೇಕಾದುದ್ದು ಕೇಂದ್ರ ಸರ್ಕಾರದ ಕರ್ತವ್ಯ. ರಾಜ್ಯ ಅಭಿವೃದ್ಧಿ ಆದರೆ ಮಾತ್ರ ದೇಶ ಅಭಿವೃದ್ಧಿ ಆಗಲು ಸಾಧ್ಯ.ರಾಜ್ಯದ ಹಿತಾಸಕ್ತಿಗಾಗಿ ರಾಜಕೀಯ ಬದಿಗಿಟ್ಟು ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ. ಕಾವೇರಿ ನೀರು ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.