ಬೆಂಗಳೂರು, ಮಾ 25 (DaijiworldNews/DB): ಮಹಾರಾಷ್ಟ್ರ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧೆಡೆ ಇಂದಿನಿಂದ 3 ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದಿನಿಂದ ಮಾರ್ಚ್ 28ರವರೆಗೆ ಗುಡುಗು, ಸಿಡಿಲು ಸಹಿತ ಅಧಿಕ ಮಳೆ ಬೀಳುವ ಸಂಭವವಿದೆ. ಇದಲ್ಲದೆ, ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.
ಕೇರಳ, ತಮಿಳುನಾಡು, ಕರ್ನಾಟಕದ ಕೆಲ ಭಾಗಗಳಲ್ಲಿ ಮಾ. 28ರವರೆಗೂ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ತುಮಕೂರು ಜಿಲ್ಲೆಯಲ್ಲಿ ಮಾರ್ಚ್ 26ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾರ್ಚ್ 27, 28ರಂದು ಮಳೆ ಬೀಳುವ ನಿರೀಕ್ಷೆ ಹೊಂದಲಾಗಿದೆ. ಉತ್ತರ ಒಳನಾಡಿನ ಗದಗ, ಹಾವೇರಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಾರ್ಚ್ 28ರವರೆಗೆ ಮಳೆ ಬೀಳುವ ಸಂಭವವಿದೆ ಎಂಬುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.