ಬೆಂಗಳೂರು, ಮಾ 26 (DaijiworldNews/DB): ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಎಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅವಕಾಶ ನೀಡದಿರಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಹಿಜಾಬ್ ನ್ನು ಶಿಕ್ಷಣ ಸಂಸ್ಥೆಗಳಲ್ಲಿ ಧರಿಸುವಂತಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಹೀಗಾಗಿ ತೀರ್ಪು ಪಾಲನೆ ಮಾಡುವುದು ಅವಶ್ಯವಾಗಿರುವ ಹಿನ್ನೆಲೆಯಲ್ಲಿ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಮಾರ್ಚ್ 28ರಿಂದ ಏಪ್ರಿಲ್ 11ರವರಗೆ ಎಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಇಲಾಖೆ ನಿರ್ಧಾರದಿಂದ ಹಿಜಾಬ್ ಧರಿಸಿ ಬಂದರೆ ಪರೀಕ್ಷೆಯಿಂದ ಹೊರಗುಳಿಯುವುದು ವಿದ್ಯಾರ್ಥಿಗಳಿಗೆ ಅನಿವಾರ್ಯವಾಗಲಿದೆ.
ಇನ್ನು ಇಲಾಖೆ ನಿರ್ಧಾರವನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರೂ ಸ್ವಾಗತಿಸಿದ್ದು, ಹಿಜಾಬ್ ಶಿಕ್ಷಣ ಸಂಸ್ಥೆಗಳಲ್ಲಿ ಧರಿಸುವಂತಿಲ್ಲ ಎಂಬುದಾಗಿ ಹೈಕೋರ್ಟ್ ತೀರ್ಪು ನೀಡಿದೆ. ತೀರ್ಪು ಜಾರಿಯಲ್ಲಿ ಇರುವುದರಿಂದ ಶಿಕ್ಷಣ ಇಲಾಖೆಯು ಹಿಜಾಬ್ ಧರಿಸಿ ಪರೀಕ್ಷೆ ಬರೆಯುವವರಿಗೆ ಅವಕಾಶ ನಿರಾಕರಿಸಿದೆ. ಈ ನಿಟ್ಟಿನಲ್ಲಿ ಯಾರೇ ಹಿಜಾಬ್ ಧರಿಸಿ ಪರೀಕ್ಷೆಗೆ ಆಗಮಿಸಿದರೂ ಅವರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಬಾರಿ 8,73,846 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷ ಎಸೆಸ್ಸೆಲ್ಸಿ ಪರೀಕ್ಷೆ ವೇಳೆ ಕೊರೊನಾ ಪ್ರಕರಣ ಹೆಚ್ಚಿದ್ದರಿಂದ ಮಾಸ್ಕ್ ಧರಿಸಿಕೊಂಡೇ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ, ಈ ಬಾರಿ ಕೊರೊನಾ ಕಡಿಮೆಯಾಗಿರುವುದರಿಂದ ಮಾಸ್ಕ್ ಧರಿಸುವುದು ಅಗತ್ಯವಿಲ್ಲ ಎಂಬುದಾಗಿ ಇಲಾಖೆ ತಿಳಿಸಿದೆ.