ಬೆಂಗಳೂರು, ಮಾ 27 (DaijiworldNews/HR): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ನ್ಯಾಯಾಲಯವು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಮಾಹಿತಿ ತಂತ್ರಜ್ಞಾನ ಕಾರಿಡಾರ್ ನಿರ್ಮಾಣಕ್ಕಾಗಿ ಮಾಡಿದ್ದ ಭೂಮಿ ಅಕ್ರಮ ಡಿನೋಟಿಫಿಕೇಶನ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಯಡಿಯೂರಪ್ಪ ಅವರು ಏಪ್ರಿಲ್ 19ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ.
ಇನ್ನು ಯಡಿಯೂರಪ್ಪ ವಿರುದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಅವರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 13 (1) (ಡಿ) ಮತ್ತು 13 (2)ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಸಮನ್ಸ್ ಜಾರಿ ಮಾಡಲು ಆದೇಶ ನೀಡಿದ್ದಾರೆ.