ಬೆಂಗಳೂರು, ಏ 02 (DaijiworldNews/DB): ಎಲ್ಲರಿಗೂ ಅವರವರ ಧರ್ಮ, ಹಬ್ಬಗಳನ್ನು ಆಚರಿಸಲು ಮುಕ್ತ ಅವಕಾಶವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ಗೌರವ ವಂದನೆ ಸ್ವೀಕರಿಸಿದ ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಧರ್ಮ, ಹಬ್ಬಗಳ ಆಚರಣೆ ಮಾಡುವುದು ಅವರವರ ವೈಯಕ್ತಿಕ ವಿಚಾರ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸವನ್ನಷ್ಟೇ ಮಾಡಲಿದೆ ಎಂದರು.
ಯುಗಾದಿ ಹಿನ್ನೆಲೆಯಲ್ಲಿ ಹಲಾಲ್ ಮಾಂಸ ಬಹಿಷ್ಕಾರಕ್ಕೆ ಕರೆ ನೀಡುತ್ತಿರುವ ವಿಷಯ ಗೊತ್ತಾಗಿದೆ. ಎಲ್ಲಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಈ ಸಂಬಂಧ ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆಗೆ ಯಾವುದೇ ದಕ್ಕೆ ಬಾರದಂತೆ ನೋಡಿಕೊಳ್ಳಲು ತಿಳಿಸಲಾಗಿದೆ ಎಂದವರು ಇದೇ ವೇಳೆ ತಿಳಿಸಿದರು.