ನವದೆಹಲಿ, ಏ 03 (DaijiworldNews/DB): ದೆಹಲಿಯಲ್ಲಿ ನಡೆದ ಡಿಎಂಕೆ ಪಕ್ಷದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಕಮ್ಯುನಿಸ್ಟ್ ಪಕ್ಷದ ಸೀತಾರಾಮ್ ಯೆಚೂರಿ ಸೇರಿದಂತ ವಿರೋಧ ಪಕ್ಷಗಳ ಕೆಲವು ನಾಯಕರು ಭಾಗವಹಿಸಿದ್ದಾರೆ.
ಈ ವೇಳೆ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್, ವಿರೋಧ ಪಕ್ಷದ ನಾಯಕರುಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ದೇಶದ ರಾಜಕೀಯ ವಲಯದಲ್ಲಿ ಹೊಸ ಬದಲಾವಣೆಗೆ ಮುಂದಡಿ ಇಟ್ಟಿದ್ದಾರೆ. ಬದಲಾವಣೆಯ ಗಾಳಿ ಮುಂದೆ ಬೀಸಲಿದೆ. ಇದೊಂದು ಐತಿಹಾಸಿಕ ಕ್ಷಣವೂ ಹೌದು ಎಂದಿದ್ದಾರೆ.
ಪಕ್ಷವು ರಾಷ್ಟ್ರ ರಾಜಧಾನಿಯಲ್ಲಿ ಕಚೇರಿ ಆರಂಭಿಸುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಪಾತ್ರ ವಹಿಸುವುದಕ್ಕೆ ಮೊದಲ ಹೆಜ್ಜೆ ಇಟ್ಟಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಸಮಗ್ರವಾಗಿ ಯೋಚನೆ ಮಾಡಿ ಯೋಜನೆ ರೂಪಿಸಲಾಗುವುದು ಎಂದರು.
ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಸೇರಿದಂತೆ ಹಲವರು ಭಾಗವಹಿಸಿದ್ದರು.