ಬೆಂಗಳೂರು, ಏ 05 (DaijiworldNews/DB): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳುತ್ತಿದ್ದು, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.
ಈ ಕುರಿತು ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಿನ ಯೋಜನೆಗಳಿಗೆ ಸಂಬಂಧಿಸಿದ ಚರ್ಚೆ ಮುಖ್ಯ ಉದ್ದೇಶವಾಗಿದೆ. ಅಲ್ಲದೆ, ಜಿಎಸ್ಟಿ ವಿಚಾರಗಳ ಬಗ್ಗೆ ಚರ್ಚಿಸಲು ಬುಧವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲಿದ್ದೇನೆ.
ಅವಕಾಶ ಸಿಕ್ಕಿದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಉದ್ದೇಶ ಇದೆ ಎಂದು ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಸಂಗೊಳ್ಳಿ ರಾಯಣ್ಣ ಶಾಲೆಯನ್ನು ಸೈನಿಕ ಶಾಲೆಯಾಗಿ ಪರಿವರ್ತನೆ ಮಾಡಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಇದೇ ವೇಳೆ ಅವರು ತಿಳಿಸಿದರು.
ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ವಿಚಾರವಾಗಿ ಸರ್ಕಾರ ಯಾವುದೇ ಹೊಸ ಆದೇಶ ಹೊರಡಿಸಿಲ್ಲ. ನ್ಯಾಯಾಲಯದ ಆದೇಶಗಳನ್ನೇ ಪಾಲನೆ ಮಾಡಲಾಗುತ್ತಿದೆ. ಕಾನೂನು ಕೈಗೆತ್ತಿಕೊಳ್ಳಲು ಯಾವುದೇ ಸಂಘಟನೆಗಳು ಮುಂದಾಗಬಾರದು ಎಂದರು.