ಬೆಂಗಳೂರು, ಏ 09 (DaijiworldNews/HR): ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಏಳು ಜನರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಪ್ರಮುಖ ಆರೋಪಿ ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಮತ್ತು ಘಟನೆಯ ವೀಡಿಯೊವನ್ನು ಮಾಡಿ, ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಇನ್ನು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬಾಲಕಿಗೆ ಮತ್ತೆ ಬ್ಲಾಕ್ಮೇಲ್ ಮಾಡಿ, ಪ್ರಮುಖ ಆರೋಪಿ ತನ್ನ ಏಳು ಜನ ಸ್ನೇಹಿತರೊಂದಿಗೆ ಸೇರಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಳುತ್ತಾ ಮನೆಗೆ ಬಂದ ಸಂತ್ರಸ್ತೆಯನ್ನು ಪೋಷಕರು ಕೇಳಿದಾಗ ಘಟನೆ ಬೆಳಕಿಗೆ ಬಂದಿದ್ದು, ನಂತರ ಸಂತ್ರಸ್ತೆಯ ತಾಯಿ ಏಪ್ರಿಲ್ 5 ರಂದು ಯಲಹಂಕ ಪೊಲೀಸರಿಗೆ ದೂರು ನೀಡಿದ್ದಾರೆ.