ಬೆಂಗಳೂರು, ಏ12 (DaijiworldNews/MS): ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ಮುಕ್ತಾಯವಾಗಿದೆ. ತಿಂಗಳಾಂತ್ಯಕ್ಕೆ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿ ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಮಂಗಳವಾರದಿಂದ ಕೀ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ , ಅಂದಿನಿಂದಲೇ ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಯಲ್ಲಿ ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವವರಲ್ಲಿ ಹಾಜರಾತಿ ಪ್ರಮಾಣ ಶೇ.98ಕ್ಕಿಂತ ಹೆಚ್ಚು ಇದೆ. ಆದರೆ, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಗೈರು ಹಾಜರಾತಿ ಪ್ರಮಾಣ ಎಂದಿನಂತೆ ಮುಂದುವರೆದಿದೆ' ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಮಾ. 28ರಿಂದ ಆರಂಭವಾದ ಪರೀಕ್ಷೆ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದು, ಮುಕ್ತಾಯವಾಗಿದೆ. ಒಂದು ಪರೀಕ್ಷಾ ಕೇಂದ್ರದಲ್ಲಿ ಮಾತ್ರ ಪರೀಕ್ಷಾ ಅಕ್ರಮ ವರದಿಯಾಗಿದೆ. ಈ ಸಂಬಂಧ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಇನ್ನು ಇದನ್ನು ಹೊರತುಪಡಿಸಿ ಸಮವಸ್ತ್ರ ವಿಚಾರವಾಗಿ ಶಾಲೆಗಳಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯ ಲಕ್ಷಣಗಳು ಕಂಡು ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರೀಕ್ಷೆಯ ಅವಧಿಯಲ್ಲಿ ಯಾವೊಬ್ಬ ವಿದ್ಯಾರ್ಥಿಗೂ ಕೋವಿಡ್ ಪಾಸಿಟಿವ್ ಬಂದಿಲ್ಲ ಎಂದು ಹೇಳಿದ್ದಾರೆ.