ಬೆಂಗಳೂರು, ಏ 12 (DaijiworldNNews/HR): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಈಶ್ವರಪ್ಪನವರು ನೇರ ಕಾರಣರಾಗಿದ್ದು, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅವರ ವಿರುದ್ಧ ಹತ್ಯೆ ಕೇಸು ದಾಖಲಿಸಿ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಹಬ್ಬುತ್ತಿದ್ದದಂತೆ ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಚಿವ ಈಶ್ವರಪ್ಪನವರು ರಾಜೀನಾಮೆ ನೀಡಬೇಕು, ಸಂಪುಟದಿಂದ ವಜಾ ಮಾಡಬೇಕು, ಇಲ್ಲದಿದ್ದರೆ ಮುಖ್ಯಮಂತ್ರಿಗಳ ನಿವಾಸಕ್ಕೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಪಡೆಯುವ ಮೂಲಕ ಭ್ರಷ್ಟಾಚಾರದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಟೀಕಿಸಿದರು.
ಬಿಜೆಪಿ ಸರ್ಕಾರದಲ್ಲಿ ಬಹುತೇಕ ಸಚಿವರು ಕಳಂಕಿತರು. ಕೆಲವರು ಜಾಮೀನಿನ ಮೇಲೆ ಹೊರಗಿದ್ದರೆ, ಮತ್ತೆ ಕೆಲವರು ಜಾಮೀನಿನ ನಿರೀಕ್ಷಣೆಯಲ್ಲಿದ್ದಾರೆ. ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.