ಬೆಂಗಳೂರು, ಏ 15 (DaijiworldNews/DB): ಈಶ್ವರಪ್ಪ ರಾಜೀನಾಮೆ ನೀಡುತ್ತಿರುವುದು ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಸಚಿವ ಕೆ.ಎಸ್. ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಳಿಕ ಶುಕ್ರವಾರ ಟ್ವೀಟ್ ಮಾಡಿರುವ ಅವರು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನೇರ ಹೊಣೆಗಾರರಾಗಿರುವ ಕೆ.ಎಸ್. ಈಶ್ವರಪ್ಪ ಅವರು ಕಡೆಗೂ ತಮ್ಮ ತಪ್ಪಿನ ಅರಿವಾಗಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ಸಂದ ಜಯ ಎಂದು ಬರೆದುಕೊಂಡಿದ್ದಾರೆ.
ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರೇ ಹೊಣೆಗಾರರು ಮತ್ತುಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಆಗ್ರಹಿಸಿ ಮೊದಲ ದಿನದಿಂದಲೇ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಇದೀಗ ಈಶ್ವರಪ್ಪ ರಾಜೀನಾಮೆ ಘೋಷಣೆ ಮಾಡಿದ್ದು, ಇಂದು ಸಂಜೆ ಮುಖ್ಯಮಂತ್ರಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಆದರೆ, ಈಶ್ವರಪ್ಪ ಬಂಧನವಾಗುವವರೆಗೂ ಅಹೋರಾತ್ರಿ ಧರಣಿ ಹಮ್ಮಿಕೊಳ್ಳುವುದಾಗಿ ಕಾಂಗ್ರೆಸ್ ತಿಳಿಸಿದೆ.