ವಿಜಯಪುರ, ಏ 15 (DaijiworldNews/DB): ರಾಜ್ಯ ಸಚಿವ ಸಂಪುಟದಲ್ಲಿ ಐದು ಸ್ಥಾನಗಳು ಖಾಲಿ ಇದ್ದು, ಹುದ್ದೆ ಭರ್ತಿಗಾಗಿ ಶೀಘ್ರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ನಾಲ್ಕು ಹುದ್ದೆ ಖಾಲಿ ಇದೆ. ಈಶ್ವರಪ್ಪ ರಾಜೀನಾಮೆ ಬಳಿಕ ಒಂದು ಹುದ್ದೆ ತೆರವಾಗಲಿದ್ದು, ಒಟ್ಟು 5 ಸ್ಥಾನ ಖಾಲಿ ಉಳಿದಂತಾಗುತ್ತದೆ. ಹಾಗಾಗಿ ಶೀಘ್ರ ಇದನ್ನು ಭರ್ತಿ ಮಾಡಲಾಗುವುದು. ಅಲ್ಲದೆ, ಕನಿಷ್ಠ ಇಬ್ಬರಿಂದ ರಾಜೀನಾಮೆ ಪಡೆದು ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆಯೂ ಇದೆ. ಆದರೆ ಯಾರಿಗೆ ಸಚಿವ ಸ್ಥಾನ ನೀಡಬೇಕು ಮತ್ತು ಯಾವ ಖಾತೆಗಳನ್ನು ಯಾರಿಗೆ ವಹಿಸಬೇಕು ಎಂಬುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು.
ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಆಡಳಿತವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಸಿಎಂ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.