ಬೆಂಗಳೂರು, ಏ 15 (DaijiworldNews/SM): ರಾಜ್ಯದಲ್ಲಿ ಸಂಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆಯ ಬಗ್ಗೆ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಪ್ರವಾಸ ಕೈಗೊಂಡ ಬಳಿಕ ಕೈಗೊಳ್ಳಲಾಗುವುದೆಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಈ ವಿಚಾರ ತಿಳಿಸಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರದ ನಾಯಕರು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಅವರ ಜೊತೆ ನಾನು ಚರ್ಚಿಸುವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಕಸರತ್ತು ಆರಂಭಿಸಿದೆ. ಕೆಲವು ಸಚಿವಾಕಾಂಕ್ಷಿಗಳು ಸದ್ಯ ಸಂಪುಟ ವಿಸ್ತರಣೆಗಾಗಿ ಎದುರು ನೋಡುತ್ತಿದ್ದಾರೆ. ಆದರೆ, ಸದ್ಯ ಯಾವುದೇ ನಿರ್ಧಾರಗಳು ಹೊರಬಿದ್ದಿಲ್ಲ.
ಇನ್ನು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಹಿಂದೆ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ನೀರಾವರಿ ಸಚಿವರಾಗಿದ್ದ ಸಂದರ್ಭದಲ್ಲಿ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ನವರಿಗೆ ಟ್ರ್ಯಾಕ್ಟರ್ ರ್ಯಾಲಿ ನಡೆಸುವ ಅಗತ್ಯವಿರಲಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.