ನವದೆಹಲಿ, ಏ 17 (DaijiworldNews/DB): ದೆಹಲಿಯಲ್ಲಿ ಹನುಮ ಜಯಂತಿ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ದೆಹಲಿಯ ವಾಯುವ್ಯ ಭಾಗದ ಜಹಾಂಗೀರ್ಪುರಿ ಪ್ರದೇಶದಲ್ಲಿ ಶನಿವಾರ ಸಂಜೆ ಹನುಮ ಜಯಂತಿಯ ಮೆರವಣಿಗೆ ನಡೆಯುತ್ತಿದ್ದ ವೇಳೆ ಹಿಂಸಾಚಾರ ಹೆಚ್ಚಾಗಿ ಕಲ್ಲು ತೂರಾಟ ನಡೆದಿತ್ತು. ಇದರಿಂದ ಹಲವು ಮಂದಿ ಪೊಲೀಸರು ಗಾಯಗೊಂಡಿದ್ದರು. ಉದ್ರಿಕ್ತರು ಸ್ಥಳದಲ್ಲಿದ್ದ ಅನೇಕ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆಯೂ ನಡೆದಿತ್ತು. ಇದರಿಂದ ಘಟನೆ ನಡೆದ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಿಸುವ ದೃಷ್ಟಿಯಿಂದ ತತ್ಕ್ಷಣ ಹೆಚ್ಚುವರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಲು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು.
ಇದೀಗ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲು ಮಾಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆಯ ವಿಶೇಷ ಪೊಲೀಸ್ ಆಯುಕ್ತ ದೀಪೇಂದ್ರ ಪಥಾಕ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.