ಹುಬ್ಬಳ್ಳಿ, ಏ 17 (DaijiworldNews/DB): ರಾಜ್ಯದಲ್ಲಿ ಸರ್ಕಾರವೇ ಕೋಮು ಗಲಭೆಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ ರಾವ್ ಆರೋಪಿಸಿದ್ದಾರೆ.
ನಗರದಲ್ಲಿ ಭಾನುವಾರ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಸೌಹಾರ್ದ ಸೈಕಲ್ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಯಾವುದೇ ಅಭಿವೃದ್ಧಿ ಕಾರ್ಯಗಳು ರಾಜ್ಯದಲ್ಲಿ ನಡೆಯುತ್ತಿಲ್ಲ. ಶೂನ್ಯ ಸಾಧನೆಯನ್ನು ಮರೆ ಮಾಚಿ ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದ ಕೋಮುಗಲಭೆಗಳಿಗೆ ಸರ್ಕಾರ ಕುಮ್ಮಕ್ಕು ನೀಡುತ್ತಾ ಬರುತ್ತಿದೆ ಎಂದು ಆಪಾದಿಸಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಕೇವಲ ಹತ್ತು ದಿನ ಅಂತರದಲ್ಲಿ ಮೂರು ಅಹಿತಕರ ಘಟನೆಗಳು ನಡೆದಿವೆ. ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣ, ಶನಿವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಘಟನೆಗಳು ಸರ್ಕಾರದ ವೈಫಲ್ಯವನ್ನು ಸಾರಿ ಹೇಳುತ್ತಿವೆ. ಸಾಮರಸ್ಯದಿಂದಿರಬೇಕಾದ ರಾಜ್ಯದಲ್ಲಿ ಧರ್ಮ ವಿಭಜನೆ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಅವರು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.