ಬೆಂಗಳೂರು, ಏ 18 (DaijiworldNews/MS): ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿದಂತೆ 36 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪರ ರಾಜೀನಾಮೆ, ಬಂಧನಕ್ಕೆ ಆಗ್ರಹಿಸಿ ಎ.13ರಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನಲೆಯಲ್ಲಿ ಒಟ್ಟು 36 ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರೇಸ್ ಕೋರ್ಸ್ ರಸ್ತೆಯ ರೇಸ್ ವ್ಯೂ ಹೋಟೆಲ್ ಬಳಿ ಅನುಮತಿ ಇಲ್ಲದೇ ಅಕ್ರಮ ಕೂಟ ಸೇರಿ, ಸಂಚಾರಕ್ಕೆ ಅಡ್ಡಿಪಡಿಸಿ ಪತ್ರಿಭಟನೆ ನಡೆಸಿದ್ದ ಆರೋಪದಡಿ ಕಾಂಗ್ರೆಸ್ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 143, 341 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಏ.13ರಂದು ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನ ಕೆಲವು ನಾಯಕರನ್ನು ಸಿಎಂ ನಿವಾಸದ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.