ಬೆಂಗಳೂರು, ಏ 22 (DaijiworldNews/DB): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯವು ಶುಕ್ರವಾರ ಅವರಿಗೆ ವಾರಂಟ್ ಜಾರಿಗೊಳಿಸಿದೆ.
ಈ ಸಂಬಂಧ ನ್ಯಾಯಾಲಯದಿಂದ ಡಿ.ಕೆ. ಶಿವಕುಮಾರ್ ಅವರಿಗೆ ನೊಟೀಸ್ ಬಂದಿದ್ದು, ಕೊರೊನಾ ನಿಯಮ ಉಲ್ಲಂಘನೆ ಮಾಡಿ ಪ್ರತಿಭಟಿಸಿದ ವಿಚಾರಕ್ಕೆ ವಾರಂಟ್ ಜಾರಿಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸ್ವತಃ ಡಿ.ಕೆ. ಶಿವಕುಮಾರ್ ಅವರೇ ಸ್ಪಷ್ಟಪಡಿಸಿದ್ದಾರೆ.
ರೈತರ ಪ್ರತಿಭಟನೆ, ಇಂಧನ ದರ ಏರಿಕೆ ಮುಂತಾದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಾಗ ಕೊರೊನಾ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ದೂರು ಹೋದ ಹಿನ್ನೆಲೆಯಲ್ಲಿ ಈ ವಾರಂಟ್ ಜಾರಿಯಾಗಿದೆ. ಸದ್ಯ ನ್ಯಾಯಾಲಯಕ್ಕೆ ಹೋಗುತ್ತಿದ್ದು, ಬಳಿಕ ಮಾತನಾಡುತ್ತೇನೆ ಎಂದು ಅವರು ಸದಾಶಿವನಗರದಲ್ಲಿ ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.