ನವದೆಹಲಿ, ಏ 23 (DaijiworldNews/DB): ಉತ್ತರಪ್ರದೇಶದ ಪ್ರಯಾಗ್ ರಾಜ್ನಲ್ಲಿ ಒಂದೇ ಕುಟುಂಬದ ಐವರು ಬರ್ಬರವಾಗಿ ಹತ್ಯೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಹತ್ಯೆ ಮಾಡಿದ ಬಳಿಕ ಮನೆಗೆ ಬೆಂಚಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಮನೆಗೆ ಏಕಾಏಕಿ ದುಷ್ಕರ್ಮಿಗಳು ದಾಳಿ ನಡೆಸಿ ಹರಿತವಾದ ಆಯುಧ ಬಳಸಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ್ದಾರೆ. ಬಳಿಕ ಇಡೀ ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬೆಂಕಿ ಹೊತ್ತಿಕೊಂಡು ಹೊಗೆ ಬರಲಾರಂಭಿಸಿದಾಗ ಅಕ್ಕಪಕ್ಕದ ಮನೆಯವರು ಹೊರಗೆ ಬಂದು ನೋಡಿ ಘಟನಾ ಸ್ಥಳಕ್ಕೆ ತೆರಳಿದಾಗ ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ತತ್ಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಿಧಿವಿಜ್ಞಾನ ತಜ್ಞರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಕಾರಣ ಏನೆಂಬುದು ಸ್ಪಷ್ಟವಾಗಿಲ್ಲ. ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ತನಿಖೆಯ ಬಳಿಕ ಕೊಲೆ ಹಿಂದಿನ ಉದ್ದೇಶ ಗೊತ್ತಾಗಲಿದೆ. ಮೃತರೆಲ್ಲರೂ ಮನೆಯ ಅಂಗಳದಲ್ಲಿ ಮಲಗಿದ್ದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಎಡಿಜಿ ಪ್ರಶಾಂತ್ ಕುಮಾರ್ ತಿಳಿಸಿರುವುದಾಗಿ ವರದಿಯಾಗಿದೆ.
ಈ ಹಿಂದೆಯೂ ಜಿಲ್ಲೆಯಲ್ಲಿ ಇಂತಹುದೇ ಘಟನೆ ನಡೆದಿತ್ತು ಎಂದು ಸ್ಥಳೀಯರು ಹೇಳಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.