ಬೆಂಗಳೂರು, ಏ 25 (DaijiworldNews/HR): ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಜನತೆಗೆ ಕೊರೊನಾ ನಾಲ್ಕನೇ ಅಲೆ ಬಗ್ಗೆ ಭಯ ಬೇಡ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ ಕೆ. ಸುಧಾಕರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕೊರೊನಾ ನಾಲ್ಕನೇ ಅಲೆ ಬಂದರೂ ಅದನ್ನು ಸಮರ್ಥವಾಗಿ ನಿರ್ವಹಣೆ ಮಾಡುವ ಶಕ್ತಿ ನಮಗಿದೆ. ನೆರೆ ರಾಜ್ಯ ಕೇರಳ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಹೆಚ್ಚಳಗೊಂಡಿದ್ದು, ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದರು.
ಇನ್ನು ರಾಜ್ಯದ ಕೋವಿಡ್ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಕರೆದಿದ್ದು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಮೂರನೇ ಅಲೆ ನಿರ್ವಹಣೆ ಮಾಡಿದಂತೆ ನಾಲ್ಕನೇ ಅಲೆಯನ್ನೂ ನಿರ್ವಹಣೆ ಮಾಡಲಾಗುವುದು ಎಂದಿದ್ದಾರೆ.