ಬೆಂಗಳೂರು, ಏ 27 (DaijiworldNews/SM): ಹಿಂದಿ ರಾಷ್ಟ್ರಭಾಷೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ ವಾರ್ ನಡೆಯುತ್ತಿದೆ. ಹಿಂದಿ ರಾಷ್ಟ್ರಭಾಷೆ ಎಂದವರಿಗೆ ಟ್ವಿಟ್ಟರ್ ಮೂಲಕವೇ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈಗಾಗಲೇ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರು ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ಹೇಳಿದ್ದರು. ಪ್ಯಾನ್-ಇಂಡಿಯನ್ ಚಿತ್ರಗಳ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುದೀಪ್, 'ಯಾರೋ ಕನ್ನಡದಲ್ಲಿ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಿಸಲಾಗಿದೆ ಎಂದು ಕೇಳಿದ್ದರು. ನಾನು ಸಣ್ಣ ತಿದ್ದುಪಡಿ ಮಾಡಲು ಬಯಸುತ್ತೇನೆ. ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದಿದ್ದರು. ಅಲ್ಲದೆ, ಬಾಲಿವುಡ್ ಚಿತ್ರೋಧ್ಯಮ ಚಲನ ಚಿತ್ರಗಳನ್ನು ನಿರ್ಮಿಸಲು ಪರದಾಡುತ್ತಿವೆ. ಆದರೆ, ನಾವು ಎಲ್ಲರಿಗೂ ಮುಟ್ಟುವಂತೆ ಚಿತ್ರ ನಿರ್ಮಿಸುತ್ತಿದ್ದೇವೆ ಎಂದು ಅವರು ಹೇಳಿದ್ದರು.
ಇದಕ್ಕೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯೆ ನೀಡಿದ್ದು, ನನ್ನ ಸಹೋದರ, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲದಿದ್ದರೆ, ನಿಮ್ಮ ಮಾತೃಭಾಷೆಯಲ್ಲಿ ಚಲನಚಿತ್ರಗಳನ್ನು ನಿರ್ಮಿಸಿ ಅದನ್ನು ಹಿಂದಿಯಲ್ಲಿ ಡಬ್ ಮಾಡಿ ಏಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರ ಭಾಷೆಯಾಗಿದೆ ಎಂಡು ಟ್ವೀಟ್ ಮಾಡಿದ್ದಾರೆ.
ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿದ್ದು, ಹಿಂದಿ ಎಂದೆಂದಿಗೂ ನಮ್ಮ ರಾಷ್ಟ್ರ ಭಾಷೆಯಾಗಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.