ಶಿವಮೊಗ್ಗ, ಏ 30 (DaijiworldNews/HR): 545 ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಲಾಗಿದ್ದು, ಮರು ಪರೀಕ್ಷೆ ನಡೆಸುವುದು ಸರ್ಕಾರಕ್ಕೆ ಅನಿವಾರ್ಯ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ಮರು ಪರೀಕ್ಷೆ ನಡೆಸುವುದು ಸರ್ಕಾರಕ್ಕೆ ಅನಿವಾರ್ಯವಾಗಿದ್ದು, ಮರು ಪರೀಕ್ಷೆ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ಅಕ್ರಮದಲ್ಲಿ ಭಾಗಿಯಾದವರನ್ನು ಬಂಧಿಸಲಾಗುತ್ತಿದೆ ಎಂದರು.
ಇನ್ನು 545 ಪಿಎಸ್ ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಪ್ತ ರಾಘವ ಅಣ್ಣಿಗೇರಿ ಎಂಬುವರು ಪ್ರಧಾನಿ ಕಚೇರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಭ್ರಷ್ಟ ಸರ್ಕಾರವಿದ್ದು, ಪೊಲೀಸ್ ಇಲಾಖೆ ಮಾತ್ರವಲ್ಲದೆ ಲೋಕೋಪಯೋಗಿ ಹಾಗೂ ನೀರಾವರಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆದಿದ್ದು, ಇವುಗಳ ಬಗ್ಗೆಯೂ ತನಿಖೆ ಮಾಡಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.