ಬೆಂಗಳೂರು, ಮೇ 0 3(DaijiworldNews/MS): ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಆ್ಯಸಿಡ್ ದಾಳಿ ಮಾಡಿ ಪರಾರಿಯಾಗಿರುವ ಆರೋಪಿ ನಾಗೇಶ್ ಬಾಬು ಪತ್ತೆಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಆರೋಪಿ ಹೊರ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದಾನೆ. ಹೀಗಾಗಿ ಆರೋಪಿ ಪತ್ತೆಗೆ ಲುಕ್ಔಟ್ ನೋಟಿಸ್ ಹೊರಡಿಸಲಾಗಿದ್ದು, ಆಂಧ್ರಪ್ರದೇಶ, ತಮಿಳುನಾಡು,ಉತ್ತರಪ್ರದೇಶ, ಮಹಾರಾಷ್ಟ್ರ, ಗುಜರಾತ್ ಸೇರಿ ಎಲ್ಲ ರಾಜ್ಯಗಳ ದೇವಾಲಯಗಳು, ಸಾರ್ವಜನಿಕ ಸ್ಥಳಗಳಲ್ಲಿ ಲುಕ್ಔಟ್ ನೋಟಿಸ್ ಅಂಟಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿ ನಾಗೇಶ್ ಬಾಬು ನಡೆಸುತ್ತಿದ್ದ ಮಧು ಗಾರ್ಮೆಂಟ್ಸ್ ನ್ನು ಮತ್ತೊಬ್ಬರಿಗೆ ಮಾರಾಟ ಮಾಡಿ, ಅದರಲ್ಲಿ ಬಂದ ಹಣದ ಜತೆ ಪರಾರಿಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಆರೋಪಿ ಒಬ್ಬನೇ ಆಗಿರುವುದರಿಂದ ಸುಳಿವು ಪತ್ತೆ ಮಾಡುವುದು ತಡವಾಗುತ್ತಿದೆ. ಈಗಾಗಲೇ ಆರು ವಿಶೇಷ ಪೊಲೀಸ್ ತಂಡಗಳು ಆತನಿಗಾಗಿ ಶೋಧ ನಡೆಸುತ್ತಿದ್ದು, ಶೀಘ್ರದಲ್ಲೇ ಆತನನ್ನು ಪತ್ತೆಹಚ್ಚಿ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.