ಬೆಂಗಳೂರು, ಮೇ 03 (DaijiworldNews/DB): ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ಹೇಳಿದ್ದಾರೆ.
ಮುಂದಿನ ವರ್ಷ ವಿಧಾನಸಭಾ ಚುನಾವಣೆ ರಾಜ್ಯದಲ್ಲಿ ನಡೆಯಲಿರುವುದರಿಂದ ರಾಜ್ಯ ರಾಜಕೀಯ ಪರಿಸ್ಥಿತಿ ಅವಲೋಕನಕ್ಕಾಗಿ ಅಮಿತ್ ಶಾ ಬೆಂಗಳೂರು ಭೇಟಿ ಹಮ್ಮಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಧಾನಿಯವರೂ ರಾಜ್ಯ ಭೇಟಿ ಕೈಗೊಳ್ಳಲಿದ್ದಾರೆ. ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವುದೇ ಇಬ್ಬರು ನಾಯಕರ ಪ್ರಮುಖ ಉದ್ದೇಶವಾಗಿದೆ ಎಂದರು.
ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದೇನೆ. ಮುಂದೆ ಪ್ರತಿ ಜಿಲ್ಲೆಗೂ ಭೇಟಿ ನೀಡಿ ಮುಖಂಡರು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಬಿಜೆಪಿಯನ್ನು ಮರಳಿ ಅಧಿಕಾರಕ್ಕೇರಿಸುವ ಗುರಿಯೊಂದಿಗೆ ಎಲ್ಲಾ ನಾಯಕರು ಶ್ರಮಿಸುತ್ತಿದ್ದೇವೆ ಎಂದವರು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾತನಾಡಿ, ನಾಯಕತ್ವ ಬದಲಾವಣೆ ಕೇವಲ ಊಹಾಪೋಹ. ಇದರ ಬಗ್ಗೆ ಯಾವುದೇ ಚರ್ಚೆ ನಡೆಯುವುದಿಲ್ಲ. ಇದು ಕಾಂಗ್ರೆಸ್ ಪಕ್ಷದ ವದಂತಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು. ಇನ್ನು ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಿಎಂ ಅವರಿಗೇ ಬಿಟ್ಟಿದ್ದಾಗಿದೆ. ಅವರೇ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ವಿವರಿಸಿದರು.