ಬೆಂಗಳೂರು, ಮೇ 03 (DaijiworldNews/HR): ಯಾರಿಗೂ ಭ್ರಮೆ ಬೇಡ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಮಿತ್ ಶಾ ರಾಜ್ಯಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರವಾಗಿ ಭಾರಿ ಚರ್ಚೆ ಆರಂಭವಾಗಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಕಟೀಲ್, ನಾಯಕತ್ವ ಬದಲಾವಣೆ ಚರ್ಚೆಯೇ ಇಲ್ಲ. ಸಿಎಂ ಬೊಮ್ಮಾಯಿ ನಾಯಕತ್ವ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸುತ್ತೇವೆ ಎಂದರು.
ಇನ್ನು ಯಾರಿಗೂ ಭ್ರಮೆ ಬೇಡ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ನಮ್ಮದೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಇದರಲ್ಲಿ ಯಾವ ಸಂಶಯವೂ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.