ತುಮಕೂರು, ಮೇ 05 (DaijiworldNews/DB): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಬಹುಮತ ಪಡೆದು ಅಧಿಕಾರಕ್ಕೆ ಬಂದಲ್ಲಿ ಎಲ್ಕೆಜಿಯಿಂದ ಪಿಯುಸಿಯವರೆಗೆ ಹೈಟೆಕ್ ಶಾಲೆ ತೆರೆದು ಉಚಿತ ಶಿಕ್ಷಣ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ತುಮಕೂರಿನ ಶಿರಾದಲ್ಲಿ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಶೀರ್ವದಿಸಬೇಕು. ಬಹುಮತದೊಂದಿಗೆ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದರೆ ಇಂಗ್ಲೀಷ್ ಮತ್ತು ಕನ್ನಡ ಮಾಧ್ಯಮದಲ್ಲಿ ಹೈಟೆಕ್ ಶಾಲೆಗಳನ್ನು ತೆರೆಯಲಾಗುವುದು. ಅಲ್ಲದೆ, ಅಂತಹ ಶಾಲೆಗಳಲ್ಲಿ ಎಲ್ಕೆಜಿಯಿಂದ ದ್ವಿತೀಯ ಪಿಯುಸಿಯವರೆಗೆ ಉಚಿತ ಶಿಕ್ಷಣ ನೀಡುವ ಗುರಿ ನಮ್ಮದು. ಜನರಿಗೆ ಉಚಿತ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಿನವಿಡೀ ಇಬ್ಬರು ವೈದ್ಯರು ಲಭ್ಯರಿರುವಂತೆ ನೋಡಿಕೊಳ್ಳುವ ಕೆಲಸವನ್ನೂ ನಾವು ಅಧಿಕಾರಕ್ಕೆ ಬಂದಲ್ಲಿ ಮಾಡಲಿದ್ದೇವೆ ಎಂದರು.
ಮುಖ್ಯಮಂತ್ರಿ ಆಗಬೇಕೆಂಬ ಉದ್ದೇಶದಿಂದ ಕಾರ್ಯಕ್ರಮ ಮಾಡುತ್ತಿಲ್ಲ. ಶಾಶ್ವತ ನೀರಾವರಿ ಯೋಜನೆ ರಾಜ್ಯದಲ್ಲಿ ಜಾರಿಯಾಗಬೇಕೆಂಬುದೇ ನಮ್ಮ ಉದ್ದೇಶ. ರಾಷ್ಟ್ರೀಯ ಪಕ್ಷಗಳೆರಡೂ ರಾಜ್ಯದ ನದಿ ನೀರು ಬಳಕೆ ಯೋಜನೆಯನ್ನು ಜಾರಿಗೊಳಿಸುವಲ್ಲಿ ವಿಫಲವಾಗಿವೆ. ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕಾಳಜಿ ವಹಿಸಿ ಕುಡಿಯುವ ನೀರಿಗೆ ಯೋಜನೆ ಜಾರಿ ಮಾಡುವ ಉದ್ದೇಶ ಹೊಂದಿದ್ದಾರೆ. ಅದಕ್ಕಾಗಿಯೇ ಈ ಕಾರ್ಯಕ್ರಮವನ್ನು ರಾಜ್ಯದ ಅಲ್ಲಲ್ಲಿ ನಡೆಸುತ್ತಿದ್ದಾರೆ ಎಂದವರು ತಿಳಿಸಿದರು.