ಬೆಂಗಳೂರು, ಮೇ 12 (DaijiworldNews/HR): ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಕಾಯ್ದೆಯಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರವು ಮುಂದಾಗಿದೆ ಎಂದು ತಿಳಿದು ಬಂದಿದೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಕಾಯ್ದೆಯಾಗಿ ಜಾರಿಗೊಳಿಸುವ ಪ್ರಸ್ತಾವ ಮಂಡಿಸಲು ಗೃಹ ಇಲಾಖೆ ಟಿಪ್ಪಣಿ ಸಿದ್ಧಪಡಿಸಿದೆ ಎಂದು ವರದಿಯಾಗಿದೆ.
ಇನ್ನು ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಯನ್ನು ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದ್ದು, ಇದೀಗ ವಿಧಾನಸಭೆಯಲ್ಲಿ ಮಂಡಿಸಿದ್ದ ಮಸೂದೆಯನ್ನೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ.