ಹೈದರಬಾದ್, ಮೇ 13 (DaijiworldNews/MS): ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಾರಾಣಸಿಯ ಜ್ಞಾನವ್ಯಾಪಿ ಮಸೀದಿಯ ಕುರಿತು ನ್ಯಾಯಾಲಯ ನೀಡಿರುವ ತೀರ್ಪು 1991ರ ಆರಾಧನಾ ಸ್ಥಳಗಳ ಕಾಯ್ದೆಯ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.
ಇಲ್ಲಿನ ಜ್ಞಾನವ್ಯಾಪಿ -ಶೃಂಗಾರ್ ಗೌರಿ ಕಟ್ಟಡದ ವೀಡಿಯೋಗ್ರಫಿ ಸಮೀಕ್ಷೆ ನಡೆಸಲು ನೇಮಿಸಿದ್ದ ವಕೀಲ ಕಮಿಷನರ್ ಅವರನ್ನು ಬದಲಿಸುವಂತೆ ಮಾಡಿದ ಮನವಿಯನ್ನು ಸ್ಥಳೀಯ ನ್ಯಾಯಾಲಯವು ಗುರುವಾರ ತಿರಸ್ಕರಿಸಿದ ನಂತರ ಮತ್ತು ಮೇ 17 ರೊಳಗೆ ಕಾರ್ಯವನ್ನು ಪೂರ್ಣಗೊಳಿಸಲು ಆದೇಶಿಸಿದ ನಂತರ ಈ ಹೇಳಿಕೆ ನೀಡಿದ್ದಾರೆ.
ನಾವು ಈಗಾಗಲೇ ಬಾಬರಿ ಮಸೀದಿಯನ್ನು ಕಳೆದುಕೊಂಡಿದ್ದೇವೆ. ಇನ್ನೊಂದು ಮಸೀದಿಯನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಬೇಸರ ವ್ಯಕ್ತಪಡಿಸಿದ್ದಾರೆ.
ಇದು ಸ್ಪಷ್ಟ ಉಲ್ಲಂಘನೆಯಾಗಿದೆ ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮತ್ತು ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್ಗೆ ಹೋಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಇದೇ ವೇಳೆ ತಿಳಿಸಿದ್ದಾರೆ.
ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಬದಲಾಯಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
1947, ಆಗಸ್ಟ್ 15ರ ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಬದಲಾಯಿಸಲು ಪ್ರಯತ್ನಿಸುವ ಯಾವುದೇ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು 1991ರ ಕಾಯ್ದೆ ಸ್ಪಷ್ಟವಾಗಿ ಹೇಳುತ್ತದೆ. ಈ ಕಾಯ್ದೆಯಡಿ ಯೋಗಿ ಸರ್ಕಾರವು ಈ ಜನರ ವಿರುದ್ಧ ತಕ್ಷಣವೇ ಎಫ್ಐಆರ್ ಅನ್ನು ದಾಖಲಿಸಬೇಕು. ನ್ಯಾಯಾಲಯದಲ್ಲಿ ಅವರು ತಪ್ಪಿತಸ್ಥರೆಂದು ಸಾಬೀತಾದರೆ, ಅವರಿಗೆ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ಓವೈಸಿ ತಿಳಿಸಿದ್ದಾರೆ.